ಬೆಂಗಳೂರು: 2020 21 ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆಗಳನ್ನು ಮೇ ಮತ್ತು ಜೂನ್ ತಿಂಗಳಿನಲ್ಲಿ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೇ ತಿಂಗಳ ಕೊನೆಯ 2 ವಾರಗಳಲ್ಲಿ ದ್ವಿತೀಯ ಪಿಯುಸಿ ಹಾಗೂ ಜೂನ್ ತಿಂಗಳ ಮೊದಲ ಎರಡು ವಾರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಉನ್ನತ ಮಟ್ಟದ ಅಧಿಕಾರಿಗಳು, ಶಿಕ್ಷಣ ತಜ್ಞರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೋವಿಡ್ 19 ಕಾರಣದಿಂದ ವಿದ್ಯಾರ್ಥಿಗಳು ಕಷ್ಟ ಅನುಭವಿಸುವಂತಾಗಿದ್ದು, ಈ ಬಾರಿಯ ಪರೀಕ್ಷೆಗೆ ಪರಿಷ್ಕೃತವಾಗಿ ನಿಯಮಿತ ಪಠ್ಯಕ್ರಮಗಳನ್ನು ನಿಗದಿಗೊಳಿಸಲಾಗಿದೆ. ರಾಜ್ಯದ ಎಲ್ಲಾ ಪಿಯು ಕಾಲೇಜು ಹಾಗೂ ಪ್ರೌಢಶಾಲೆಗಳಿಗೆ ಈ ಕುರಿತು ವಿವರಿಸಲಾಗಿದೆ. ಸೂಕ್ತ ಬೋಧನೆ ಸಹಿತ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಅನುಸರಿಸಲಾಗುವುದು ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.